ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಪೊಲಿಂಕಾನ ಉತ್ಸವ

Posted on: August 12, 2018

 

6ac21184-ac42-4d4e-81b2-0425819368ad

ಮಡಿಕೇರಿ: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವದ ವಿಶೇಷ ಪೂಜೆ ನಡೆಯಿತು.

ಶ್ರೀಭಗಂಡೇಶ್ವರ ದೇವಾಲಯದ ಆವರಣದ ಶ್ರೀಮಹಾಗಣಪತಿ, ಶ್ರೀಮಹಾವಿಷ್ಣು, ಶ್ರೀಸುಬ್ರಹ್ಮಣ್ಯ ಹಾಗೂ ಶ್ರೀಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು.

ನಂತರ ವಾದ್ಯಗೋಷ್ಠಿಯೊಂದಿಗೆ ತ್ರಿವೇಣಿ ಸಂಗಮಕ್ಕೆ ತೆರಳಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ಕಾವೇರಿ ಮಾತೆಗೆ ಕೃತಜ್ಞತಾಪೂರ್ವಕವಾಗಿ ಸುಮಂಗಲಿ ಮಂಟಪವನ್ನು ವಿಸರ್ಜಿಸಲಾಯಿತು. ನೂರಾರು ಭಕ್ತರು ಪೊಲಿಂಕಾನ ಉತ್ಸವಕ್ಕೆ ಸಾಕ್ಷಿಯಾದರು.

ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಗಿದೆ. ಶ್ರೀಭಗಂಡೇಶ್ವರ ದೇವಾಲಯದ ಎಲ್ಲಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಕಾವೇರಿಗೆ ಕೃತಜ್ಞತಾಭಾವದಿಂದ ಸುಮಂಗಲಿ ಮಂಟಪವನ್ನು ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ವಿವರಿಸಿದರು.

ce003360-f7c1-4aa5-bcd5-0e76e59da5d3

3ca159b5-9ed2-4f43-a853-0b4aedaf2414

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *